

ಮರ್ಚೆಡ್ ಡೇಸ್ ಸುದ್ದಿ.
ಕೊಪ್ಪಳ:ಕನಕಗಿರಿ ತಾಲೂಕಿನ ನವಲಿ ಗ್ರಾಮದ ಸುತ್ತಮುತ್ತಲಿನಲ್ಲಿ ನಡೆಯುತ್ತಿದ್ದ ಬೃಹತ್ ಅಕ್ರಮ ಮರಳು ಗಣಿಗಾರಿಕೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅಕ್ರಮ ಮರಳುಗಾರಿಕೆಗೆ ಬಳಸುತ್ತಿದ್ದ ನಾಲ್ಕು ಹಿಟಾಚಿ ಯಂತ್ರಗಳು ಸೇರಿದಂತೆ ಅಪಾರ ಪ್ರಮಾಣದ ಮರಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಪ್ರದೇಶದಲ್ಲಿ ಸುಮಾರು 20ಕ್ಕೂ ಹೆಚ್ಚು ಅಕ್ರಮ ಮರಳು ಅಡ್ಡೆಗಳು ತಲೆ ಎತ್ತಿರುವ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ಅಧಿಕಾರಿಗಳ ತಂಡ ಸ್ಥಳಕ್ಕೆ ದಾಳಿ ಮಾಡುತ್ತಿದ್ದಂತೆ ದಂಧೆಯಲ್ಲಿ ತೊಡಗಿದ್ದ ಕೆಲವರು ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿಯ ವೇಳೆ 20 ಟಿಪ್ಪರ್ಗೂ ಅಧಿಕ ಮರಳು, 4 ಹಿಟಾಚಿ ಯಂತ್ರಗಳು, ಒಂದು ಆಯಿಲ್ ಇಂಜಿನ್ ಮತ್ತು ಒಂದು ಟಿಪ್ಪರನ್ನು ವಶಕ್ಕೆ ಪಡೆದು, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ದಂಧೆ ನಡೆಯುತ್ತಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಗಣಿಗಾರಿಕೆಯಿಂದ ಪರಿಸರಕ್ಕೆ ಆಗಿರುವ ಹಾನಿ ಮತ್ತು ಕಳೆದುಕೊಂಡ ಸಂಪನ್ಮೂಲಗಳ ಕುರಿತು ವರದಿಯನ್ನು ಸಿದ್ಧಪಡಿಸುತ್ತಿದ್ದಾರೆ.
ಅಕ್ರಮ ಗಣಿಗಾರಿಕೆಯಿಂದಾಗಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಸುತ್ತಮುತ್ತಲಿನ ಕೃಷಿ ಭೂಮಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಪರಿಸರದ ಮೇಲೆ ಆಗುತ್ತಿರುವ ಈ ಹಾನಿಯನ್ನು ತಡೆಯಲು ಮತ್ತು ಅಕ್ರಮ ದಂಧೆಗೆ ಕಡಿವಾಣ ಹಾಕಲು ಲೋಕಾಯುಕ್ತರು ಬದ್ಧರಾಗಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಲೋಕೇಶ್ ಮತ್ತು ಚಂದ್ರು ಈಟಿ ತಂಡ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು. ಸದ್ಯ ಪ್ರಕರಣವನ್ನು ದಾಖಲಿಸಿಕೊಂಡಿರುವ ಅಧಿಕಾರಿಗಳು, ಅಕ್ರಮ ದಂಧೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಿ ಕಾನೂನು ಕ್ರಮ ಜರುಗಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಿದ್ದಾರೆ.