ಮರ್ಚೆಡ್ ಡೇಸ್ ಸುದ್ದಿ|ರಾಯಚೂರು.
ರಾಯಚೂರು: ಜುಲೈ 31ತಂತ್ರಜ್ಞಾನ ಮತ್ತು ವಿಜ್ಞಾನದಲ್ಲಿ ಎಷ್ಟೇ ಮುನ್ನಡೆ ಸಾಧಿಸಿದ್ದರೂ, ಮಾನವೀಯತೆಯನ್ನು ತಲೆತಗ್ಗಿಸುವಂತೆ ಮಾಡುವ ಮಾನವ ಕಳ್ಳ ಸಾಗಾಣಿಕೆ ಎಂಬ ಘೋರ ಅಪರಾಧವು ಸಮಾಜದಲ್ಲಿ ಇಂದಿಗೂ ಜೀವಂತವಿರುವುದು ಕಳವಳಕಾರಿ ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ಶ್ರೀ ಸಿದ್ದರಾಮಪ್ಪ ಕಲ್ಯಾಣ್ ರಾವ್ ಕಳವಳ ವ್ಯಕ್ತಪಡಿಸಿದರು.
ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಡತನ ಮತ್ತು ನಿರುದ್ಯೋಗವನ್ನು ಬಂಡವಾಳ ಮಾಡಿಕೊಳ್ಳುವ ಕಿಡಿಗೇಡಿಗಳು, ಉತ್ತಮ ಕೆಲಸ ಹಾಗೂ ಹೆಚ್ಚಿನ ಆದಾಯದ ಆಮಿಷವೊಡ್ಡಿ ಗ್ರಾಮೀಣ ಹಾಗೂ ಬಡ ಕುಟುಂಬಗಳ ಮಹಿಳೆಯರು ಮತ್ತು ಹೆಣ್ಣುಮಕ್ಕಳನ್ನು ಸುಲಭವಾಗಿ ವಂಚಿಸಿ ಅಕ್ರಮ ಸಾಗಾಣಿಕೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಒಪ್ಪಿಗೆಯಿಲ್ಲದೆ ಮಹಿಳೆಯರನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕರೆದೊಯ್ದು ಲೈಂಗಿಕ ಶೋಷಣೆ, ಜೀತದಾಳು ಕೆಲಸ, ಬಲವಂತದ ಮದುವೆ ಅಥವಾ ಅಂಗಾಂಗ ಮಾರಾಟಕ್ಕೆ ಒಳಪಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಎಚ್ಚರಿಸಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಹರೀಶ್ ಜಿ. ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗೆ ಪೊಲೀಸ್ ಇಲಾಖೆ ಸದಾ ಶ್ರಮಿಸುತ್ತಿದೆ ಎಂದರು. ಸಾರ್ವಜನಿಕರ ಸುತ್ತಮುತ್ತ ಯಾವುದೇ ಶಂಕಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಕೋರಿದರು. ತುರ್ತು ಸಹಾಯಕ್ಕಾಗಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಅಥವಾ ಮಹಿಳಾ ಸಹಾಯವಾಣಿ ಸಂಖ್ಯೆ 181 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ, ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.