ಮರ್ಚೆಡ್ ಡೇಸ್ ಸುದ್ದಿ|ಕನಕಗಿರಿ.
ಕನಕಗಿರಿ: ಗಂಗಾವತಿ ತಾಲೂಕಿನ ನವಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯಗುರುಗಳ ಕರ್ತವ್ಯಲೋಪ, ಸಮಯಕ್ಕೆ ಸರಿಯಾಗಿ ಹಾಜರಾಗದಿರುವುದು ಮತ್ತು ಮೂಲಸೌಕರ್ಯಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳು, ಪಾಲಕರು ಹಾಗೂ ಎಸ್ಎಫ್ಐ ಕಾರ್ಯಕರ್ತರು ಶನಿವಾರ ಶಾಲೆಯ ಆವರಣದಲ್ಲಿ ಭಾರಿ ಪ್ರತಿಭಟನೆ ನಡೆಸಿದರು. ಶಾಲೆಯ ಆಡಳಿತ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಲೆಗೆ ಸರಿಯಾದ ಸಮಯಕ್ಕೆ ಬಾರದಿರುವುದು ಸೇರಿದಂತೆ ವಿವಿಧ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಮುಖ್ಯಗುರು ಅಜ್ಮೀರ್ ಊಮಲೂಟಿ ಅವರ ಕಾರ್ಯವೈಖರಿ ವಿರುದ್ಧ ಎಲ್ಲರೂ ಒಮ್ಮತದ ಅಸಮಾಧಾನ ಹೊರಹಾಕಿದರು. ವಿದ್ಯಾರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಸಮರ್ಪಕವಾಗಿ ಪೌಷ್ಟಿಕ ಆಹಾರ ನೀಡುತ್ತಿಲ್ಲ. ಶೌಚಾಲಯ ಹಾಗೂ ಕುಡಿಯುವ ನೀರಿನ ನಿರ್ವಹಣೆ ಸರಿಯಾಗಿಲ್ಲದೆ ಸ್ವಚ್ಛತೆಯ ಕೊರತೆ ಉಂಟಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ಪಾಲಕರ ಸಮಸ್ಯೆಗಳಿಗೆ ಮುಖ್ಯಗುರುಗಳು ಸ್ಪಂದಿಸುತ್ತಿಲ್ಲ. ಕ್ರೀಡೆ ಹಾಗೂ ಇತರೆ ಪಠ್ಯೇತರ ಚಟುವಟಿಕೆಗಳಿಗೂ ಯಾವುದೇ ಪ್ರೋತ್ಸಾಹ ನೀಡುತ್ತಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೂಡಲೇ ಮುಖ್ಯಗುರು ಅಜ್ಮೀರ್ ಊಮಲೂಟಿ ಅವರನ್ನು ಅಮಾನತುಗೊಳಿಸಬೇಕು ಎಂದು ಬಲವಾಗಿ ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಶಿವಕುಮಾರ ಈಚನಾಳ, ಕೃಷ್ಣ, ಗ್ರಾಮಸ್ಥರು ಹಾಗೂ ಎಸ್ಡಿಎಂಸಿ ಅಧ್ಯಕ್ಷ ನಾಗಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.
ಸ್ಥಳಕ್ಕೆ ಆಗಮಿಸಿದ ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಟೇಶ್ ಅವರು ಪ್ರತಿಭಟನಾಕಾರರ ಅಹವಾಲುಗಳನ್ನು ಆಲಿಸಿ ಶಾಲೆಯ ಪರಿಸ್ಥಿತಿಯನ್ನು ಪರಿಶೀಲಿಸಿದರು. ನಂತರ ಮಾತನಾಡಿ, “ಮುಖ್ಯಗುರುಗಳ ಕರ್ತವ್ಯಲೋಪ ಹಾಗೂ ಮೂಲಸೌಕರ್ಯಗಳ ಕೊರತೆ ಕುರಿತು ದೂರುಗಳು ಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಶಿಸ್ತುಕ್ರಮ ಕೈಗೊಳ್ಳಲು ಮೇಲಧಿಕಾರಿಯಾದ ಡಿಡಿಪಿಐ ಅವರಿಗೆ ವರದಿ ಸಲ್ಲಿಸಲಾಗುವುದು” ಎಂದು ಭರವಸೆ ನೀಡಿದರು. ಬಿಇಒ ಅವರ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.