ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.
ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ನಿಯಮ ಉಲ್ಲಂಘನೆ.
ಗಂಗಾವತಿ: ನಗರ ಪ್ರದೇಶದಲ್ಲಿ ಸಭೆ, ಸಮಾರಂಭ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯನ್ನು ನಿಯಂತ್ರಿಸುವಂತೆ ಸರ್ಕಾರ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದ್ದರೂ, ಜವಾಬ್ದಾರಿಯುತ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳೇ ಆ ನಿಯಮಗಳನ್ನು ಪಾಲಿಸುತ್ತಿಲ್ಲ. ನಗರದ ಪತ್ರಿಕಾ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಪರಿಸರ ಪ್ರೇಮಿ ಹಾಗೂ ವಿದ್ಯಾರ್ಥಿನಿ ಸಿಂಧೂ ದೇವೇಂದ್ರ ಆನೆಗೊಂದಿ, ಮುನಿರಾಬಾದ್ನ ಕಾಡಾ ಕಚೇರಿಯಲ್ಲಿ ನಡೆದ ಐಸಿಸಿ ಸಭೆಯಲ್ಲಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಿರುವುದು ಪರಿಸರ ಕಾಳಜಿಯ ಬಗ್ಗೆ ಗಂಭೀರ ಪ್ರಶ್ನೆ ಮೂಡಿಸಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುವ ಮೂಲಕ ಜನಪ್ರತಿನಿಧಿಗಳು ಸಾರ್ವಜನಿಕರಿಗೆ ಯಾವ ರೀತಿಯ ಮಾದರಿ ಸಂದೇಶ ನೀಡುತ್ತಿದ್ದಾರೆ ಎಂದು ಸಿಂಧೂ ಆಕ್ರೋಶದಿಂದ ಪ್ರಶ್ನಿಸಿದರು. ಮಾದರಿಯಾಗಬೇಕಾದವರೇ ಸ್ವತಃ ಕಾನೂನು ಉಲ್ಲಂಘನೆ ಮಾಡಿದರೆ ಜನಸಾಮಾನ್ಯರ ಮೇಲೆ ಅದರ ದುಷ್ಪರಿಣಾಮ ಬೀರುತ್ತದೆ. ಪರಿಸರ ಸಂರಕ್ಷಣೆಯ ಬಗ್ಗೆ ಕೇವಲ ಭಾಷಣಗಳನ್ನು ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಅಂಜನಾದ್ರಿ, ಆನೆಗೊಂದಿ ಹಾಗೂ ಹುಲಗಿ ಪ್ರಮುಖ ಪ್ರವಾಸಿ ಹಾಗೂ ಧಾರ್ಮಿಕ ತಾಣಗಳಾಗಿದ್ದು, ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಭಕ್ತರು ಆಗಮಿಸುತ್ತಾರೆ. ಆದರೆ, ಈ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳ ಅಗತ್ಯವಿದೆ ಎಂದು ತಿಳಿಸಿದರು. ಈ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯದ ಹಾವಳಿ ವಿಪರೀತವಾಗಿ ಹೆಚ್ಚುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಪರಿಸರದ ಮೇಲೆ ತೀವ್ರ ದುಷ್ಪರಿಣಾಮ ಬೀರುವ ಆತಂಕವಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಪ್ರವಾಸಿ ತಾಣಗಳನ್ನು ಹಂತ ಹಂತವಾಗಿ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಪ್ರದೇಶಗಳನ್ನಾಗಿ ರೂಪಿಸಲು ಆಡಳಿತ ವರ್ಗ ಮುಂದಾಗಬೇಕು. ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಮೊದಲು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಿ ಸಾರ್ವಜನಿಕರಿಗೆ ಮಾದರಿಯಾಗಬೇಕು. ಇಲ್ಲದಿದ್ದರೆ ಪರಿಸರ ಸಂರಕ್ಷಣೆಗಾಗಿ ರೂಪಿಸುವ ನಿಯಮಗಳು ಮತ್ತು ಕಾಯ್ದೆಗಳು ಕೇವಲ ಕಾಗದದ ಮೇಲಷ್ಟೇ ಉಳಿದು, ಭಾಷಣಗಳಿಗೆ ಮಾತ್ರ ಸೀಮಿತವಾಗಲಿವೆ ಎಂದು ಸಿಂಧೂ ದೇವೇಂದ್ರ ಆನೆಗೊಂದಿ ಕಟುವಾಗಿ ಎಚ್ಚರಿಸಿದರು.