ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.
ಗಂಗಾವತಿ: ಬ್ರಿಟಿಷರ ಎರಡು ಶತಮಾನಗಳ ಸುದೀರ್ಘ ಆಡಳಿತದ ಗುಲಾಮಗಿರಿಯಿಂದ ಭಾರತ ಮುಕ್ತಿ ಪಡೆದ ಐತಿಹಾಸಿಕ ದಿನವೇ ಆಗಸ್ಟ್ 15 ಎಂದು ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರ ರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಶಿವರಾಜ ಗುರಿಕಾರ ಅಭಿಪ್ರಾಯಪಟ್ಟಿದ್ದಾರೆ. ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸುಭಾಷ್ ಚಂದ್ರ ಬೋಸ್ ಹಾಗೂ ಭಗತ್ ಸಿಂಗ್ ಸೇರಿದಂತೆ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಜೀವವನ್ನೇ ತ್ಯಾಗ ಮಾಡಿದ್ದಾರೆ. ಅವರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸುವ ಈ ದಿನವು ದೇಶದ ಐಕ್ಯತೆ, ಸಮಗ್ರತೆ ಹಾಗೂ ಪ್ರತಿಯೊಬ್ಬರಲ್ಲೂ ದೇಶಪ್ರೇಮವನ್ನು ಜಾಗೃತಗೊಳಿಸುವ ಪ್ರಮುಖ ಪ್ರತೀಕವಾಗಿದೆ ಎಂದು ತಿಳಿಸಿದರು.
ಈ ವಿಶೇಷ ರಾಷ್ಟ್ರೀಯ ಹಬ್ಬದ ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ವಿರೇಶ್ ಬಲಕುಂದಿ, ಸೋಮಶೇಖರ್ ಕಂಪ್ಲಿ ಸೇರಿದಂತೆ ಕಾಲೇಜಿನ ಹಿರಿಯ ಪ್ರಾಧ್ಯಾಪಕರಾದ ಡಾ. ಕೃಷ್ಣ, ಡಾ. ಉಮಾಕಾಂತ್ ಅವರೆಡ್ಡಿ, ಡಾ. ಅಣ್ಣೋಜಿ ರೆಡ್ಡಿ, ಡಾ. ಇಬ್ರಾಹೀಮ್ ಮತ್ತು ಡಾ. ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದು ಸ್ವಾತಂತ್ರ್ಯದ ಮಹತ್ವ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಕಾರ್ಯಕ್ರಮದ ಯಶಸ್ವಿ ನಿರ್ವಹಣೆಯನ್ನು ದೈಹಿಕ ಶಿಕ್ಷಣ ಬೋಧಕರಾದ ಡಾ. ಅನಿಲ್ ಎಡವರ್ಡ್ ಹಾಗೂ ಶೋಭಾ ರಾಣಿ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ವ್ಯವಸ್ಥಾಪಕ ಸಿಬ್ಬಂದಿ, ಬೋಧಕ ಮತ್ತು ಬೋಧಕೇತರ ವರ್ಗದವರು, ವಿವಿಧ ವಿಭಾಗಗಳ ಪ್ರಾಧ್ಯಾಪಕರು ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.