ಮರ್ಚೆಡ್ ಡೇಸ್ ಸುದ್ದಿ|ಕನಕಗಿರಿ.
ಕೊಪ್ಪಳ ಜಿಲ್ಲೆಯ ಕನಕಗಿರಿ ನಗರದಲ್ಲಿ ಆಸ್ತಿ ವಿವಾದದ ಹಿನ್ನೆಲೆ ಗಂಭೀರ ಬೆಳವಣಿಗೆಯೊಂದು ನಡೆದಿದೆ. ಆಸ್ತಿ ವಿಚಾರವಾಗಿ ಬೆದರಿಕೆ ಹಾಗೂ ಕಿರುಕುಳ ತಾಳಲಾರದೆ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಬಸವರಾಜ್ ರೆಡ್ಡಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಾವಿನ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮೃತರ ಶವವನ್ನು ಪೊಲೀಸ್ ಠಾಣೆ ಮುಂದೆ ಇಟ್ಟು ಪ್ರತಿಭಟನೆ ನಡೆಸಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ.
ಬಸವರಾಜ್ ರೆಡ್ಡಿ ಅವರಿಗೆ ಆಸ್ತಿ ವಿಚಾರವಾಗಿ ನಿರಂತರವಾಗಿ ಬೆದರಿಕೆ ಹಾಗೂ ಕಿರುಕುಳ ನೀಡಲಾಗುತ್ತಿತ್ತು. ಈ ಬಗ್ಗೆ ಈ ಹಿಂದೆಯೇ ದೂರು ನೀಡಿದ್ದರೂ ಸಹ ಪೊಲೀಸರು ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಮೃತರ ಕುಟುಂಬಸ್ಥರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣಕ್ಕೆ ರಾಜಕೀಯ ತಿರುವು ಸಿಕ್ಕಿದೆ ಎಂಬ ಆರೋಪವೂ ಕೇಳಿಬಂದಿದ್ದು, ಸ್ಥಳೀಯ ರಾಜಕಾರಣಿಗಳ ಒತ್ತಡದಿಂದಾಗಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿ ರುವುದರಿಂದ, ಬಳ್ಳಾರಿ ವಲಯ ಐಜಿಪಿ ಡಾ. ಪಿ. ಹರ್ಷ್ ಅವರು ತುರ್ತಾಗಿ ಕನಕಗಿರಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ರಜೆಯಲ್ಲಿದ್ದ ಕೊಪ್ಪಳ ಎಸ್ಪಿ ಡಾ. ರಾಮ್ ಅರಸಿದ್ದಿ ಕೂಡ ಠಾಣೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.
ಪ್ರತಿಭಟನೆ ಉಲ್ಬಣಗೊಳ್ಳುವ ಮುನ್ನೆಚ್ಚರಿಕೆ ಕ್ರಮವಾಗಿ ಕನಕಗಿರಿ ಪೊಲೀಸ್ ಠಾಣೆಯ ಸುತ್ತಲೂ ಬಿಗಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಮುಂದುವರೆದಿದೆ.
