ಮರ್ಚೆಡ್ ಡೇಸ್ ಸುದ್ದಿ|ಕಲಬುರಗಿ.
ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದೊಂದಿಗೆ ಯುವ ಚಿತ್ರಕಲಾವಿದೆ ಲಕ್ಷ್ಮೀ ಆರ್. ಪೊದ್ದಾರ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ನಗರದ ಬಿಸಿಲು ಆರ್ಟ್ ಗ್ಯಾಲರಿಯಲ್ಲಿ ಆಯೋಜಿಸಲಾಗಿದೆ. ಆ. 23 ರಿಂದ 25, 2026 ರವರೆಗೆ ಮೂರು ದಿನಗಳ ಕಾಲ ಈ ಪ್ರದರ್ಶನ ನಡೆಯಲಿದೆ
.
ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯ ಹಾಗೂ ಹಿರಿಯ ಚಿತ್ರಕಲಾವಿದ ಬಸವರಾಜ ಎಲ್. ಜಾನೆ ಅವರು ಆ. 23 ರಂದು ಬೆಳಿಗ್ಗೆ 10:30 ಗಂಟೆಗೆ ಕಲಾ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಕೃತಿಕಾ ಸಾಂಸ್ಕೃತಿಕ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಮಂಜುಳಾ ಜಾನೆ ಮತ್ತು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಗೀತ ಮತ್ತು ಲಲಿತಕಲಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಿವಾನಂದ ಬಂಟನೂರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ವ್ಹಿ.ಬಿ. ಬಿರಾದಾರ ಕಲಾ ಪ್ರತಿಷ್ಠಾನದ ಉಪಾಧ್ಯಕ್ಷರಾದ ಶ್ರೀಮತಿ ಶೈಲಜಾ ಬಿರಾದಾರ ಅಧ್ಯಕ್ಷತೆ ವಹಿಸಲಿದ್ದಾರೆ.
ಗುಲಬರ್ಗಾ ವಿಶ್ವವಿದ್ಯಾಲಯದಿಂದ ಚಿತ್ರಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಲಕ್ಷ್ಮೀ ಆರ್. ಪೊದ್ದಾರ ಅವರು ರಚಿಸಿದ ಸುಮಾರು 25ಕ್ಕೂ ಹೆಚ್ಚು ವಿವಿಧ ಮಾಧ್ಯಮದ ಚಿತ್ರಕಲಾಕೃತಿಗಳು ಈ ಪ್ರದರ್ಶನದಲ್ಲಿ ಅನಾವರಣಗೊಳ್ಳಲಿವೆ. ಇವರು ಈಗಾಗಲೇ 10ಕ್ಕೂ ಹೆಚ್ಚು ರಾಜ್ಯ ಮಟ್ಟದ ಕಲಾಪ್ರದರ್ಶನ ಹಾಗೂ ಕಲಾ ಶಿಬಿರಗಳಲ್ಲಿ ಪಾಲ್ಗೊಂಡಿದ್ದು, ಗುಲಬರ್ಗಾ ವಿಶ್ವವಿದ್ಯಾಲಯದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮತ್ತು 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಲಾ ಸ್ಪರ್ಧೆಯ ಪ್ರಶಸ್ತಿ ಸೇರಿದಂತೆ 10ಕ್ಕೂ ಹೆಚ್ಚು ವಿವಿಧ ಪ್ರಶಸ್ತಿ-ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.
ಆ. 23 ರಿಂದ ಆ. 25, 2026 ರವರೆಗೆ ಪ್ರತಿದಿನ ಬೆಳಿಗ್ಗೆ 10:30 ಗಂಟೆಯಿಂದ ಸಾಯಂಕಾಲ 6:00 ಗಂಟೆಯವರೆಗೆ ಕಲಾ ಪ್ರದರ್ಶನವು ತೆರೆದಿರಲಿದ್ದು, ಕಲಾಪ್ರೇಮಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಚಿತವಾಗಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.