ರಸ್ತೆ ತುಂಬ ಕೆಸರು–ಕೊಳಚೆ; ಶಾಲಾ ಮಕ್ಕಳ ಪರದಾಟ ಕುಡಿಯುವ ನೀರಿನ ಪೈಪ್ ಒಡೆದು ಆತಂಕ
ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.
ಗಂಗಾವತಿ: ನಗರದಲ್ಲಿ ನಡೆಯುತ್ತಿರುವ ಭೂಗತ ಒಳಚರಂಡಿ (UGD) ಕಾಮಗಾರಿ ಜನರಿಗೆ ಅನುಕೂಲವಾಗಬೇಕಿದ್ದರೂ, ಕಾಮಗಾರಿ ನಿರ್ವಹಣೆಯಲ್ಲಿನ ಲೋಪ ಹಾಗೂ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರಿಗೆ ಸಂಕಷ್ಟ ತಂದೊಡ್ಡಿದೆ ಎಂಬ ಆರೋಪ ಕೇಳಿಬಂದಿದೆ.
ನಗರದ ಜನನಿಬಿಡ ವಸತಿ ಪ್ರದೇಶಗಳಲ್ಲಿ UGD ಕಾಮಗಾರಿಗಾಗಿ ರಸ್ತೆಗಳು ಅಗೆದಿದ್ದು, ಹಲವೆಡೆ ಗುಂಡಿಗಳನ್ನು ಸಮರ್ಪಕವಾಗಿ ಮುಚ್ಚದೆ ಹಾಗೆಯೇ ಬಿಡಲಾಗಿದೆ. ಕಲ್ಲು, ಮಣ್ಣು ಹಾಗೂ ಕಾಂಕ್ರೀಟ್ ಚಪ್ಪಡಿಗಳು ರಸ್ತೆಯಲ್ಲೇ ಬಿದ್ದಿದ್ದು, ವಾಹನ ಸವಾರರು ಮಾತ್ರವಲ್ಲದೆ ಕಾಲ್ನಡಿಗೆಯಲ್ಲಿ ಸಂಚರಿಸುವವರಿಗೂ ತೊಂದರೆಯಾಗಿದೆ.
ಇದರ ನಡುವೆ ಕೆಲವು ಕಡೆ ಕುಡಿಯುವ ನೀರಿನ ಪೈಪ್ಲೈನ್ಗಳು ಹಾನಿಗೊಳಗಾಗಿದ್ದು, ಕೊಳಚೆ ನೀರು ರಸ್ತೆಯ ಮೇಲೆ ಹರಿಯುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಕುಡಿಯುವ ನೀರಿನ ಪೈಪ್ಲೈನ್ಗೆ ಕೊಳಚೆ ನೀರು ಸೇರುವ ಸಾಧ್ಯತೆ ಇದೆ ಎಂಬ ಆತಂಕ ಸ್ಥಳೀಯರಲ್ಲಿ ಮೂಡಿದೆ.
ಬೆಳಿಗ್ಗೆ ಶಾಲೆಗೆ ತೆರಳುವ ಮಕ್ಕಳು ಇದೇ ರಸ್ತೆಯಲ್ಲಿ ಕೆಸರು ಮತ್ತು ಕೊಳಚೆ ನೀರಿನ ನಡುವೆ ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಜಾರಿ ಬೀಳುವ ಭೀತಿಯ ನಡುವೆ ಮಕ್ಕಳು ಶಾಲೆಗೆ ತೆರಳುವಂತಾಗಿದೆ. ಸಮವಸ್ತ್ರ ಹಾಗೂ ಪುಸ್ತಕಗಳು ಕೆಸರಾಗುತ್ತಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಬೈಕ್, ಸೈಕಲ್ ಸಂಚಾರಕ್ಕೂ ಅಡಚಣೆಯಾಗಿದ್ದು, ಕಾಲ್ನಡಿಗೆಯಲ್ಲೂ ಸರಾಗವಾಗಿ ಸಂಚರಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ವಯೋವೃದ್ಧರು, ಮಹಿಳೆಯರು ಹಾಗೂ ಮಕ್ಕಳು ಮನೆಯಿಂದ ಹೊರಬರಲು ಪರದಾಡುವಂತಾಗಿದೆ.ದುರ್ವಾಸನೆ, ಸೊಳ್ಳೆಗಳ ಕಾಟ ಇತ್ಯಾದಿ.
ರಸ್ತೆಯಲ್ಲಿ ಕೊಳಚೆ ನೀರು ನಿಂತಿರುವುದರಿಂದ ದುರ್ವಾಸನೆ ಹರಡುತ್ತಿದೆ. ಸೊಳ್ಳೆಗಳ ಉತ್ಪತ್ತಿಗೂ ಇದು ಕಾರಣವಾಗುವ ಸಾಧ್ಯತೆ ಇರುವುದರಿಂದ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸೊಳ್ಳೆಗಳಿಂದ ಹರಡುವ ರೋಗಗಳ ಆತಂಕವೂ ಸಾರ್ವಜನಿಕರಲ್ಲಿ ಮೂಡಿದೆ.
“ಒಂದು ಕಡೆ ಕಾಮಗಾರಿ ಪೂರ್ಣಗೊಳಿಸದೆ ಮತ್ತೊಂದು ಕಡೆ ರಸ್ತೆ ಅಗೆಯುತ್ತಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬಂದು ಕಾಮಗಾರಿಯ ಸ್ಥಿತಿಗತಿ ಪರಿಶೀಲಿಸುತ್ತಿಲ್ಲ. ಗುತ್ತಿಗೆದಾರರಿಗೆ ಹಲವು ಬಾರಿ ಸಮಸ್ಯೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಮಳೆ ಬಂದರೆ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ. ಕೂಡಲೇ ರಸ್ತೆ ದುರಸ್ತಿ ಮಾಡಬೇಕು” ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
UGD ಕಾಮಗಾರಿಯಿಂದ ಸಾರ್ವಜನಿಕರಿಗೆ ಉಂಟಾಗಿರುವ ತೊಂದರೆಗಳನ್ನು ನಿವಾರಿಸಲು ಗಂಗಾವತಿ ನಗರಸಭೆ ಪೌರಾಯುಕ್ತರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWS&DB) ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಒಡೆದಿರುವ ಕುಡಿಯುವ ನೀರಿನ ಪೈಪ್ಲೈನ್ಗಳನ್ನು ತಕ್ಷಣ ದುರಸ್ತಿಪಡಿಸುವುದು, ಅಗೆದಿರುವ ಗುಂಡಿಗಳನ್ನು ಮುಚ್ಚಿ ತಾತ್ಕಾಲಿಕವಾಗಿ ಮಣ್ಣು ಹಾಕಿ ಜನರು ಮತ್ತು ಮಕ್ಕಳು ಸುರಕ್ಷಿತವಾಗಿ ಸಂಚರಿಸಲು ವ್ಯವಸ್ಥೆ ಮಾಡುವುದು ಹಾಗೂ ಕಾಮಗಾರಿ ಪೂರ್ಣಗೊಳ್ಳುವವರೆಗೆ ಅಗತ್ಯವಿರುವ ಕಡೆ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಾಮಗಾರಿ ಹೆಸರಿನಲ್ಲಿ ಜನರ ಸಂಚಾರಕ್ಕೆ ತೊಂದರೆ ಉಂಟಾಗದಂತೆ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲವಾದರೆ ಸಾರ್ವಜನಿಕರು ಒಗ್ಗೂಡಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಸ್ಥಳೀಯರು ಈ ಮೂಲಕ ಸಂದೇಶ ನೀಡಿದ್ದಾರೆ .
ವರದಿ: ಜೋಗಿನ್ ರಮೇಶ್ ನಾಯಕ, ಗಂಗಾವತಿ