
ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.
ಕಲಿಕೆಯು ಕೇವಲ ಪದವಿ, ಉದ್ಯೋಗಕ್ಕೆ ಸೀಮಿತವಾಗಬಾರದು; ಜೀವನದ ಮೌಲ್ಯ, ಆತ್ಮವಿಶ್ವಾಸ ಮತ್ತು ನಾಯಕತ್ವದ ಗುಣಗಳನ್ನು ಬೆಳೆ ಬೆಳೆಸಿಕೊಳ್ಳಬೇಕು | ಗಂಗಾವತಿ ಶ್ರೀ ಕೊಲ್ಲಿ ನಾಗೇಶ್ವರ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ.
ಗಂಗಾವತಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣವೆಂದರೆ ಕೇವಲ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿ ಪದವಿ ಪಡೆಯುವುದಲ್ಲ. ಬದಲಾಗಿ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಚಿಂತನೆ, ಮಾನವೀಯ ಮೌಲ್ಯಗಳು, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಮೂಲಕ ಸಮಗ್ರ ವ್ಯಕ್ತಿತ್ವವನ್ನು ರೂಪಿಸುವುದೇ ಶಿಕ್ಷಣದ ನೈಜ ಉದ್ದೇಶವಾಗಬೇಕು ಎಂದು ಕರ್ನಾಟಕ ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಕೊಪ್ಪಳ ಜಿಲ್ಲೆಯ 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷರಾದ ಡಾ. ಶರಣಬಸಪ್ಪ ಕೋಲ್ಕಾರ ಪ್ರತಿಪಾದಿಸಿದರು. ನಗರದ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ 2026-27ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ವಿವಿಧ ಸಮಿತಿಗಳ ಉದ್ಘಾಟನಾ ಸಮಾರಂಭ ನೆರವೇರಿಸಿ ಅವರು ಮಾತನಾಡಿದರು.
ಮಾನವನ ಭೌದ್ಧಿಕ ಸಾಮರ್ಥ್ಯ ಅಪಾರವಾಗಿದ್ದರೂ ಜೀವನವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವುದು ಸುಲಭದ ಸಂಗತಿಯಲ್ಲ. ಬದುಕಿಗೆ ಒಂದು ನಿರ್ದಿಷ್ಟ ಚೌಕಟ್ಟಿನ ವ್ಯಾಖ್ಯಾನ ನೀಡಲು ಸಾಧ್ಯವಿಲ್ಲ. ಪರೀಕ್ಷೆಗಳಲ್ಲಿ ಉನ್ನತ ಅಂಕ ಗಳಿಸಿ ಉತ್ತೀರ್ಣರಾದವರೆಲ್ಲರೂ ಜೀವನದಲ್ಲಿ ಯಶಸ್ವಿಯಾಗಿದ್ದಾರೆ ಎಂದರ್ಥವಲ್ಲ. ನಿಜವಾದ ಯಶಸ್ಸು ಸವಾಲುಗಳನ್ನು ಎದುರಿಸುವ ಸಾಮರ್ಥ್ಯ, ಬದುಕಿನ ಮೌಲ್ಯಗಳನ್ನು ಅರಿತುಕೊಳ್ಳುವ ಮನೋಭಾವ ಮತ್ತು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದರಲ್ಲಿ ಅಡಗಿದೆ. ಇಂತಹ ಗುಣಗಳನ್ನು ಬೆಳೆಸಿಕೊಂಡ ಮಹನೀಯರ ಜೀವನವೇ ವಿದ್ಯಾರ್ಥಿಗಳಿಗೆ ನೈಜ ಪಾಠವಾಗಬೇಕು ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳು ಬದುಕಿನಲ್ಲಿ ಸಕಾರಾತ್ಮಕ ಚಿಂತನೆ ಬೆಳೆಸಿಕೊಂಡರೆ ಯಾವುದೇ ಗುರಿಯನ್ನು ತಲುಪಲು ಸಾಧ್ಯ. ಇದಕ್ಕೆ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಬದುಕುಗಳು ಪ್ರೇರಣೆಯಾಗಬೇಕು. ವಿದ್ಯಾರ್ಥಿ ಜೀವನವು ಭವಿಷ್ಯ ರೂಪಿಸಿಕೊಳ್ಳಲು ದೊರೆಯುವ ಅತ್ಯಮೂಲ್ಯ ಅವಕಾಶವಾಗಿದ್ದು, ಅದನ್ನು ವ್ಯರ್ಥ ಮಾಡಿಕೊಳ್ಳದೆ ಸದುಪಯೋಗಪಡಿಸಿಕೊಳ್ಳಬೇಕು. ಸಮಾಜದಲ್ಲಿ ತಮ್ಮದೇ ಆದ ಅಸ್ತಿತ್ವ ರೂಪಿಸಿಕೊಳ್ಳುವುದರ ಜೊತೆಗೆ ಬೌದ್ಧಿಕ ಮತ್ತು ಭೌತಿಕ ಬೆಳವಣಿಗೆಗೂ ಸಮಾನ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣ ಮಾಡಿದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಮುಮ್ತಾಜ್ ಬೇಗಂ, ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಏಕಾಗ್ರತೆ ವಹಿಸುವುದರ ಜೊತೆಗೆ ಕಾಲೇಜು ಜೀವನದಲ್ಲಿ ಪಡೆದುಕೊಳ್ಳುವ ಜ್ಞಾನ ಮತ್ತು ಅನುಭವಗಳ ಕುರಿತು ನಿರಂತರ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು. ಪಠ್ಯವಿಷಯಗಳ ಅಧ್ಯಯನದ ಜೊತೆಗೆ ಕ್ರೀಡೆ ಹಾಗೂ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಸಾಮರ್ಥ್ಯ, ಆತ್ಮವಿಶ್ವಾಸ ಮತ್ತು ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕೃಷ್ಣ ಜೆ. ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಆಸಕ್ತಿಯಿಂದ ಅಧ್ಯಯನ ನಡೆಸಿ ತಮ್ಮ ಬದುಕನ್ನು ರೂಪಿಸಿಕೊಳ್ಳುವುದರೊಂದಿಗೆ ತಾವು ಕಲಿಯುತ್ತಿರುವ ವಿದ್ಯಾಸಂಸ್ಥೆಯ ಘನತೆ ಮತ್ತು ಗೌರವವನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದರು. ಕಾಲೇಜಿನಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆಯಾದರೆ ವಿದ್ಯಾರ್ಥಿಗಳ ಉನ್ನತ ವ್ಯಾಸಂಗ, ಸಂಶೋಧನೆ ಹಾಗೂ ಶೈಕ್ಷಣಿಕ ಅಧ್ಯಯನಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂಬ ಆಶಯವನ್ನೂ ವ್ಯಕ್ತಪಡಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಇಬ್ರಾಹಿಂ ಎಂ.ಕೆ. ಮಾತನಾಡಿ, ಶಿಕ್ಷಣದ ಉದ್ದೇಶ ಕೇವಲ ಉದ್ಯೋಗ ಪಡೆಯುವುದಕ್ಕೆ ಸೀಮಿತವಾಗಬಾರದು. ಲೌಕಿಕ ಜ್ಞಾನ, ಮಾನವೀಯ ಮೌಲ್ಯಗಳು ಮತ್ತು ಜೀವನಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದೇ ಶಿಕ್ಷಣದ ನಿಜವಾದ ಸಾರ್ಥಕತೆ ಎಂದರು. ಶೈಕ್ಷಣಿಕ ಸಂಯೋಜಕಿ ದೊಡ್ಡ ಬಸಮ್ಮ ಹಾಗೂ ಅತಿಥಿ ಉಪನ್ಯಾಸಕ ಬಾಳಪ್ಪ ಪ್ರಾಸಂಗಿಕವಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಶಿವರಾಜ ಗುರಿಕಾರ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಲ್ಲಿನ ಆದರ್ಶ ವ್ಯಕ್ತಿಗಳ ಗುಣನಡತೆಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಹಿರಿಯ ವಿದ್ಯಾರ್ಥಿಗಳ ಸಾಧನೆಗಳನ್ನು ಸ್ಫೂರ್ತಿಯಾಗಿ ಸ್ವೀಕರಿಸಿ, ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳುತ್ತಾ ಅಧ್ಯಯನದಲ್ಲಿ ನಿರಂತರ ತೊಡಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ತರಗತಿಗಳಲ್ಲಿ ಶಿಕ್ಷಕರು ಬೋಧಿಸುವ ಪಾಠ ಮತ್ತು ಪ್ರವಚನಗಳನ್ನು ಏಕಾಗ್ರತೆಯಿಂದ ಆಲಿಸಿ, ಜ್ಞಾನವನ್ನು ವಿಸ್ತರಿಸಿಕೊಳ್ಳುವ ಮೂಲಕ ಶೈಕ್ಷಣಿಕವಾಗಿ ಉನ್ನತ ಹಂತ ತಲುಪಬೇಕು ಎಂದು ಹುರಿದುಂಬಿಸಿದರು.
ಸಮಾರಂಭದಲ್ಲಿ ಎನ್ಸಿಸಿ ವಿಭಾಗದಲ್ಲಿ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳು ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಕಾಲೇಜಿನ ಪ್ರಾಧ್ಯಾಪಕರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ತುಳಸಿ ಪ್ರಾರ್ಥಿಸಿದರು. ಡಾ. ಪವನಕುಮಾರ ಗುಂಡೂರು ಅತಿಥಿಗಳನ್ನು ಪರಿಚಯಿಸಿದರು. ಡಾ. ಉಮಾಕಾಂತ ಅವರೆಡ್ಡಿ ಮತ್ತು ಡಾ. ನರಸಿಂಹ ಸ್ವಾಗತಿಸಿದರು. ಉಪನ್ಯಾಸಕ ಡಾ. ಮಣಿಕಂಠ ಹಂಗಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.