ಮರ್ಚೇಡ್ ಡೇಸ್ ಸುದ್ದಿ|ಗಂಗಾವತಿ.
ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಉತ್ತಮ ಸಾಧನೆ; ಶ್ರೀ ಕೊಲ್ಲಿ ನಾಗೇಶ್ವರ ರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕೀರ್ತಿ.
ಗಂಗಾವತಿ, ನವೆಂಬರ್ 19: ನಗರದ ಶ್ರೀ ಕೊಲ್ಲಿ ನಾಗೇಶ್ವರ ರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎಸ್.ಸಿ (B.Sc) ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಅವರು ರಾಜ್ಯ ಮಟ್ಟದ ಅಣುಕು ಯುವ ಸಂಸತ್ತು ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಕೊಪ್ಪಳ ಜಿಲ್ಲಾ ಮಟ್ಟದಲ್ಲಿ ನಡೆದ ಯುವ ಸಂಸತ್ತು ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದ ಸೌಜನ್ಯ ಅವರು, ಇದೀಗ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾರೆ.
ಈ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಒಟ್ಟು 224 ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ತಾಲೂಕುಗಳಿಂದ ಆಯ್ಕೆಯಾದ 50 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು, ಅವರಲ್ಲಿ ಶ್ರೀ ಕೊಲ್ಲಿ ನಾಗೇಶ್ವರ ರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 11 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕುಮಾರಿ ಸೌಜನ್ಯ ಅವರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ರಾಜ್ಯ ಮಟ್ಟದ ಯುವ ಸಂಸತ್ ಕಲಾಪ ಸ್ಪರ್ಧೆಗೆ ಆಯ್ಕೆಯಾಗಿರುವುದು ವಿಶೇಷವಾಗಿದೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯರಾದ ಡಾ. ಶಿವರಾಜ್ ಗುರಿಕಾರ, ಹರ್ಷ ವ್ಯಕ್ತಪಡಿಸಿ, ಶುಭ ಕೋರಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಮಂಜುನಾಥ್ ಕೆ. ಎಚ್, ಸಹಾಯಕ ಪ್ರಾಧ್ಯಾಪಕ ಫಣಿರಾಜ್ ಬಾರೀಕೆರ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ, ಶೈಕ್ಷಣಿಕ ಸಂಯೋಜಕರು ಹಾಗೂ ಸಿಬ್ಬಂದಿ ವರ್ಗ, ಶುಭಕೋರಿ ಅಭಿನಂದಿಸಿದ್ದಾರೆ.