ಪ್ರೋತ್ಸಾಹ ಧನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕ.ವಿ.ಸಂ. ಮನವಿ
ಮರ್ಚೆಡ್ ಡೇಸ್ ಸುದ್ದಿ.
ಕೊಪ್ಪಳ.ಮೇ.30: 2025-26ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಶೇಕಡಾ 60ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾದ ಪರಿಶಿಷ್ಟ ಜಾತಿ (ಎಸ್.ಸಿ) ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡಬೇಕಿರುವ ಪ್ರೋತ್ಸಾಹ ಧನ ಇನ್ನೂ ಬಿಡುಗಡೆಯಾಗದೇ ಇರುವುದರಿಂದ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸ ಮುಂದುವರಿಸಲು ತೀವ್ರ ಆರ್ಥಿಕ ಸಂಕಷ್ಟ ಎದುರಿಸಿವುದನ್ನು ಗಮನಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಕೊಪ್ಪಳದ ಸಮಾಜ ಕಲ್ಯಾಣಾಧಿಕಾರಿಗಳಿಗೆ ಶನಿವಾರದಂದು ಮನವಿ ಸಲ್ಲಿಸಲಾಯಿತು.
ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿ ಉತ್ತಮ ಸಾಧನೆ ಮಾಡಿದ ನೂರಾರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರಾಗಿದ್ದರೂ, ಕಳೆದ ಹಲವು ತಿಂಗಳಿಂದ ಹಣ ಬಿಡುಗಡೆಯಾಗದೇ ಬಾಕಿ ಉಳಿದಿದೆ. ಇದರಿಂದ ವಿದ್ಯಾರ್ಥಿಗಳ ಮುಂದಿನ ಶಿಕ್ಷಣ, ಪ್ರವೇಶ ಪ್ರಕ್ರಿಯೆ ಹಾಗೂ ಶಿಕ್ಷಣ ವೆಚ್ಚ ನಿರ್ವಹಣೆಗೆ ತೊಂದರೆ ಉಂಟಾಗಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.
ಪ್ರೋತ್ಸಾಹ ಧನದ ನಿರೀಕ್ಷೆಯಲ್ಲಿರುವ ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿದವರಾಗಿದ್ದು, ಕಾಲೇಜು ಶುಲ್ಕ, ಹಾಸ್ಟೆಲ್ ಮತ್ತು ವಸತಿ ವೆಚ್ಚ, ಪುಸ್ತಕ ಖರೀದಿ ಹಾಗೂ ಪ್ರಯಾಣ ವೆಚ್ಚಗಳನ್ನು ಭರಿಸಲು ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ.
ಸರ್ಕಾರದ ಈ ಯೋಜನೆ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಪ್ರಮುಖ ಕಲ್ಯಾಣ ಯೋಜನೆಯಾಗಿದ್ದು, ಹಣ ಬಿಡುಗಡೆ ವಿಳಂಬವಾಗುತ್ತಿರುವುದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಬಾಕಿ ಇರುವ ಪ್ರೋತ್ಸಾಹ ಧನವನ್ನು ಶೀಘ್ರದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವಂತೆ ವಿದ್ಯಾರ್ಥಿಗಳು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ವೇಳೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಉಮೇಶ್ ಬಡಗಿ, ವಕೀಲರಾದ ಯಮನೂರ ಈಳಿಗಿನೂರ, ಗಣೇಶ , ರವಿ, ಮಾರತಿ, ಗಾಳೆಶ್, ಸೇರಿದಂತೆ
ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
“2025-26ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇಕಡಾ 60ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣನಾಗಿದ್ದೇನೆ. ಉನ್ನತ ವಿದ್ಯಾಭ್ಯಾಸ ಮುಂದುವರಿಸಲು ಆರ್ಥಿಕ ಸಂಕಷ್ಟ ಎದುರಾಗಿದ್ದು, ಸರ್ಕಾರದಿಂದ ಬರಬೇಕಾದ ಪ್ರೋತ್ಸಾಹ ಧನ ಇನ್ನೂ ಬಿಡುಗಡೆಯಾಗಿಲ್ಲ. ಇದರಿಂದ ಉನ್ನತ ವ್ಯಾಸಂಗ ಮುಂದುವರಿಸಲು ತೀವ್ರ ಕಷ್ಟ ಎದುರಾಗಿದೆ.”
ದೇವರಾಜ ಚೌಡ್ಕಿ
ಎಸ್.ಸಿ ವಿದ್ಯಾರ್ಥಿ