
ಮರ್ಚೆಡ್ ಡೇಸ್ ಸುದ್ದಿ.
ರಾಯಚೂರು : ಜೂನ್ 08 (ಕರ್ನಾಟಕ ವಾರ್ತೆ): ಮಹತ್ವಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರು ಗ್ರಾಮದ ಕಡೆ ಪ್ರಯಾಣ ಬೆಳೆಸಿ, ಗಬ್ಬೂರಿನ ಅಂಗನವಾಡಿ ಕೇಂದ್ರ ಸಂಖ್ಯೆ 07ಕ್ಕೆ ಭಾರತ ಸರ್ಕಾರದ ವಾಣಿಜ್ಯ ಇಲಾಖೆಯ ಜಂಟಿ ಕಾರ್ಯದರ್ಶಿಗಳು ಹಾಗೂ ಮಹತ್ವಕಾಂಕ್ಷಿ ಜಿಲ್ಲೆಯ ರಾಯಚೂರಿನ ಕೇಂದ್ರ ಪ್ರಭಾರಿ ಅಧಿಕಾರಿಗಳಾದ ಉಜ್ವಲ ಕುಮಾರ್ ಘೋಷ್ ಅವರು ಜೂನ್ 08ರ ಸೋಮವಾರ ರಂದು ಭೇಟಿ ನೀಡಿ, ಪರಿಶೀಲನೆ ಮಾಡಿದರು.
ಅಂಗನವಾಡಿಯ ಸುತ್ತಮುತ್ತಲಿನ ಪರಿಸರ, ಮಕ್ಕಳ ತರಗತಿ ಗೃಹ, ಅಡುಗೆ ಕೋಣೆ, ದಾಸ್ತಾನು ಕೊಠಡಿಗಳಿಗೆ ತೆರಳಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರಿಗೆ ಕಟ್ಟಡದ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಳ್ಳುವಂತೆ ಸೂಚನೆ ನೀಡಿದರು. ಇತ್ತೀಚಿನ ಮಳೆಯಿಂದಾಗಿ ಸೊಳ್ಳೆಗಳು ಉತ್ಪತ್ತಿಯಾಗುವ ಸಾಧ್ಯತೆ ಇರುತ್ತದೆ. ಸೊಳ್ಳೆಗಳು ಕಚ್ಚುವುದರಿಂದ ಮಕ್ಕಳಿಗೆ ರೋಗ-ರುಜಿನಗಳು ಬರುವ ಸಾಧ್ಯತೆ ಇರುತ್ತದೆ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು.
ಪ್ರಸಕ್ತ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಆಹಾರ, ಉತ್ಪನ್ನಗಳ ಬಗ್ಗೆ ಮಾಹಿತಿ ಪಡೆದ ಅವರು, ಉತ್ತಮ ಗುಣಮಟ್ಟದ ಆಹಾರ ವಿತರಣೆಗೆ ಸೂಚನೆ ನೀಡಿದರು. ಮಕ್ಕಳಿಗೆ ನೀಡುತ್ತಿರುವ ಆಟಿಕೆ ವಸ್ತುಗಳನ್ನು ಖುದ್ದಾಗಿ ಪರಿಶೀಲಿಸಿದರು.
ನಂತರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.
ಆಸ್ಪತ್ರೆಯ ಸ್ವಚ್ಛತೆ, ರೋಗಿಗಳಿಗೆ ನೀಡುವ ಚಿಕಿತ್ಸೆ, ತುರ್ತು ಚಿಕಿತ್ಸಾ ಘಟಕದಲ್ಲಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು. ನಂತರ ಸೂಚಿ ಮಾಡುವ ಕೊಠಡಿ, ಮೆಡಿಕಲ್ ಆಫೀಸರ್ ಕೊಠಡಿ, ಪ್ರಯೋಗಾಲಯ ಕೊಠಡಿ, ಮುಖ್ಯ ಔಷಧ ಉಗ್ರಾಣಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ, ಆಸ್ಪತ್ರೆಗೆ ಸಿಬ್ಬಂದಿಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಂಬಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಶಾ ಕಾರ್ಯಕರ್ತೆ ಗರ್ಭಿಣಿಯರಿಗೆ ಕಾಲಕಾಲಕ್ಕೆ ಲಸಿಕೆ ಕೊಡಿಸಬೇಕು. ಸರ್ಕಾರದ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಆಶಾ ಕಾರ್ಯಕರ್ತೆಯರ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಸಂಬಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೂ ಮುಂಚೆ ಗಬ್ಬೂರಿನ ನಾಡ ಕಚೇರಿಗೆ ಭೇಟಿ ನೀಡಿದರು.
ನಂತರ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಮಸರಕಲ್ ಗ್ರಾಮದ ಶಕ್ತಿ ವೀಟಾ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಿದರು.
ಕೇಂದ್ರದ ಶೇಖರಣಾ ವಿಭಾಗ, ತಯಾರಿಕಾ ವಿಭಾಗ ಸೇರಿದಂತೆ ವಿವಿಧ ವಿಭಾಗವನ್ನು ವೀಕ್ಷಣೆ ಮಾಡಿ, ಆಹಾರ ತಯಾರಿಕೆ ಯಂತ್ರಗಳ ಕುರಿತು ಮಾಹಿತಿ ಪಡೆದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಡಾ.ಟಿ.ರೋಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ದೇವದುರ್ಗ ತಹಶಿಲ್ದಾರ್ ನಾಗಮ್ಮ ಕಟ್ಟಿಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್., ದೇವದುರ್ಗ ತಾಲೂಕು ಆರೋಗ್ಯಾಧಿಕಾರಿ ಡಾ.ಬನದೇಶ್ವರ, ದೇವದುರ್ಗ ಸಿಡಿಪಿಒ ಮಹೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.