ಮರ್ಚೆಡ್ ಡೇಸ್ ಸುದ್ದಿ.
ಕೊಪ್ಪಳ: ನಗರ ಹೊಸಪೇಟೆ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಎಟಿಎಂ ಕೇಂದ್ರ.
ಬುಧವಾರದ ಮುಂಜಾನೆ ಸುಮಾರು 3:00 ರಿಂದ 3:30ರ ಸುಮಾರಿಗೆ ಈ ಘಟನೆ ನಡೆದಿದೆ.
ಎಟಿಎಂ ಕೇಂದ್ರಕ್ಕೆ ನುಗ್ಗಿದ ದುಷ್ಕರ್ಮಿಗಳು ಮೊದಲು ಅಲ್ಲಿನ ಸಿಸಿಟಿವಿ (CCTV) ಕ್ಯಾಮೆರಾಗಳ ಮೇಲೆ ‘ಬ್ಲಾಕ್ ಸ್ಪ್ರೇ’ ಸಿಂಪಡಿಸಿ, ಅವುಗಳ ದೃಶ್ಯಗಳನ್ನು ಮರೆಮಾಚಲು ಪ್ರಯತ್ನಿಸಿದ್ದಾರೆ. ನಂತರ, ಗ್ಯಾಸ್ ಕಟರ್ ಬಳಸಿ ಎಟಿಎಂ ಯಂತ್ರವನ್ನು ತೆರೆಯಲು ಯತ್ನಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ಯಾಸ್ ಕಟರ್ನಿಂದ ಕಿಡಿಗಳು ಬಂದು ಯಂತ್ರದ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಸ್ಥಿತಿ ಅಪಾಯಕಾರಿ ಎಂದು ಅರಿತ ಕಳ್ಳರು, ಹಣ ಲೂಟಿ ಮಾಡಲು ಸಾಧ್ಯವಾಗದೆ ಸ್ಥಳದಿಂದ ಪರಾರಿಯಾಗಿದ್ದಾರೆ.
ಎಟಿಎಂ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಗಮನಿಸಿದ ಕಟ್ಟಡದ ಮಾಲೀಕರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ಕೊಪ್ಪಳ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆರಳಚ್ಚು ತಜ್ಞರು ಕೂಡ ಸ್ಥಳ ಪರಿಶೀಲನೆ ಮಾಡಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.
ಎಟಿಎಂ ಯಂತ್ರದಲ್ಲಿದ್ದ ಹಣ ಸುರಕ್ಷಿತವಾಗಿದೆಯೇ ಎಂಬುದರ ಕುರಿತು ಬ್ಯಾಂಕ್ ಅಧಿಕಾರಿಗಳು ಮತ್ತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.