ಮರ್ಚೆಡ್ ಡೇಸ್ ಸುದ್ದಿ.
ಕೊಪ್ಪಳ, ಜೂನ್ 15: ಜಿಲ್ಲೆಯ ಅಳವಂಡಿ ಪೊಲೀಸ್ ಠಾಣೆಯಲ್ಲಿ ಕಾನೂನು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಘಟನೆಯನ್ನು ಖಂಡಿಸಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾನೂನು ವಿದ್ಯಾರ್ಥಿಗಳ ನಿಯೋಗದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರಿಗೆ ಮನವಿ ಸಲ್ಲಿಸಲಾಯಿತು.
ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ಮಧ್ಯಪ್ರವೇಶಿಸಿದ್ದು, ಜೂನ್ 14ರಂದು ರಾತ್ರಿ ಸುಮಾರು 8 ಗಂಟೆಗೆ ಮರಿತಿಮ್ಮಪ್ಪ ಎಂಬ ಯುವಕನನ್ನು ಠಾಣೆಗೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ವಿಷಯ ತಿಳಿದ ಮರಿತಿಮ್ಮಪ್ಪನ ಸ್ನೇಹಿತರಾದ ಕಾನೂನು ವಿದ್ಯಾರ್ಥಿಗಳಾದ ಯಲ್ಲಪ್ಪ ಮೇಟಿ ಹಾಗೂ ಬಸವರಾಜ್ ಠಾಣೆಗೆ ತೆರಳಿ ಯುವಕನನ್ನು ವಶಕ್ಕೆ ಪಡೆದಿರುವ ಕಾರಣವನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಠಾಣೆಯೊಳಗೆ ಯುವಕನ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಲು ಮುಂದಾದಾಗ ಪಿಎಸ್ಐ ಮೊಬೈಲ್ ಕಸಿದುಕೊಂಡು ಅಂಗವಿಕಲ ವಿದ್ಯಾರ್ಥಿ ಯಲ್ಲಪ್ಪ ಮೇಟಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಇದನ್ನು ತಡೆಯಲು ಮುಂದಾದ ಬಸವರಾಜ್ ಅವರ ಮೇಲೂ ಪಿಎಸ್ಐ ಹಾಗೂ ಇಬ್ಬರು ಪೊಲೀಸ್ ಪೇದೆಗಳು ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಗಳು ಎಸ್ಪಿಗೆ ಸಲ್ಲಿಸಿರುವ ಮನವಿಯಲ್ಲಿ ಆರೋಪಿಸಿದ್ದಾರೆ.
ಘಟನೆಯನ್ನು ಖಂಡಿಸಿರುವ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಮುಖಂಡ ಉಮೇಶ್ ಬಡಗಿ, “ಜನರ ರಕ್ಷಕರಾಗಿರಬೇಕಾದ ಪೊಲೀಸರು ಭಕ್ಷಕರಂತೆ ವರ್ತಿಸುತ್ತಿರುವುದು ಖಂಡನೀಯ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಸಂಬಂಧಪಟ್ಟ ಪಿಎಸ್ಐ ಹಾಗೂ ಸಿಬ್ಬಂದಿಯನ್ನು ತಕ್ಷಣ ಅಮಾನತುಗೊಳಿಸಿ ಕಾನೂನು ಕ್ರಮ ಜರುಗಿಸಬೇಕು. ಬಾಧಿತ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ಹಾಗೂ ಭದ್ರತೆ ಒದಗಿಸಬೇಕು. ಇಲ್ಲವಾದಲ್ಲಿ ಜಿಲ್ಲಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.