ಮರ್ಚೆಡ್ ಡೇಸ್ ಸುದ್ದಿ.
ರಾಯಚೂರು: ಸಿದ್ರಾಂಪುರದಲ್ಲಿ ನಿರ್ಮಾಣಗೊಂಡಿರುವ ನೂತನ ಸರ್ಕಾರಿ ಮಾದರಿ ಪದವಿ ಕಾಲೇಜು ಕಟ್ಟಡದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಭದ್ರತಾ ಲೋಪಗಳ ಬಗ್ಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಶುಕ್ರವಾರ ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
12 ಕೋಟಿ ರೂ.ಗಳ ವೆಚ್ಚದಲ್ಲಿ ಕಾಲೇಜು ಕಟ್ಟಡ ನಿರ್ಮಾಣವಾಗಿದ್ದರೂ, ಪ್ರಮುಖವಾಗಿ ಕುಡಿಯುವ ನೀರಿನ ಸೌಲಭ್ಯ ಇಲ್ಲದಿರುವುದನ್ನು ಕಂಡು ಆಯೋಗದ ಅಧ್ಯಕ್ಷರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. “ಯಾವುದೇ ಕಾಮಗಾರಿ ಪ್ರಾರಂಭಿಸುವ ಮುನ್ನ ಬೋರ್ವೆಲ್ ಹಾಕಿಸುವುದು ಸಾಮಾನ್ಯ ನಿಯಮ. ಆದರೆ, ಭವ್ಯ ಕಟ್ಟಡ ನಿರ್ಮಾಣವಾದರೂ ನೀರಿಗೆ ಪರದಾಡುತ್ತಿರುವುದು ಸರಿಯಲ್ಲ. ಹೊರಗಿನಿಂದ ನೀರು ತರುವುದು ಎಷ್ಟು ಸಮಂಜಸ?” ಎಂದು ಪ್ರಶ್ನಿಸಿದ ಅವರು, ತಕ್ಷಣವೇ ನೀರಿನ ಸಮಸ್ಯೆ ಬಗೆಹರಿಸಲು ಸೂಚಿಸಿದರು.
ಕಾಲೇಜು ಪರಿಶೀಲನೆಯ ನಂತರ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ ಡಾ. ನಾಗಲಕ್ಷ್ಮೀ ಚೌಧರಿ, ವಸತಿ ನಿಲಯದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆ ತಮಗೆ ದೂರುಗಳು ಬಂದಿರುವುದನ್ನು ಉಲ್ಲೇಖಿಸಿದರು. ಈ ಕೂಡಲೇ ಇಂತಹ ಚಟುವಟಿಕೆಗಳನ್ನು ಮಟ್ಟ ಹಾಕಬೇಕು ಮತ್ತು ವಿದ್ಯಾರ್ಥಿನಿಯರ ರಕ್ಷಣೆಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಆಶಯ. ಇದಕ್ಕಾಗಿ ಮೀಸಲಿಟ್ಟ ಅನುದಾನ ಪೋಲಾಗಬಾರದು ಎಂದು ಎಚ್ಚರಿಸಿದ ಅವರು, ವಸತಿ ನಿಲಯದಲ್ಲಿ ಬಾಕಿ ಇರುವ ಸಣ್ಣಪುಟ್ಟ ಕೆಲಸಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ, ವಿದ್ಯಾರ್ಥಿನಿಯರಿಗೆ ಅನುಕೂಲ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.