ಮರ್ಚೆಡ್ ಡೇಸ್ ಸುದ್ದಿ.
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ತಮ್ಮ ಪುತ್ರಿಗೆ ಸರ್ಕಾರಿ ಹುದ್ದೆಯನ್ನು ಕೊಡಿಸುವ ಸಲುವಾಗಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ಅಮಾನತು ಆದೇಶವು ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವುದು ಆಡಳಿತ ಯಂತ್ರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಆಯೋಗದ ಘನತೆಗೆ ಧಕ್ಕೆ ತಂದಿದೆ ಎಂದು ಆಡಳಿತಾತ್ಮಕ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.
ಶಿವಶಂಕರಪ್ಪ ಅವರ ಅಮಾನತಿನ ಬೆನ್ನಲ್ಲೇ, ಆಯೋಗದ ಹೊಸ ಅಧ್ಯಕ್ಷರಾಗಿ ಬಿ. ಪ್ರಭುದೇವ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಈ ಮೂಲಕ ಕೆಪಿಎಸ್ಸಿ ಆಡಳಿತದಲ್ಲಿ ತಕ್ಷಣವೇ ಬದಲಾವಣೆ ತರುವ ಪ್ರಯತ್ನ ನಡೆದಿದ್ದು, ಮುಂದಿನ ದಿನಗಳಲ್ಲಿ ಆಯೋಗದ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ಮೂಡಲಿದೆಯೇ ಎಂಬುದು ಕಾದು ನೋಡಬೇಕಿದೆ.