ಮರ್ಚೆಡ್ ಡೇಸ್ ಸುದ್ದಿ.
ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ನಡೆದ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಗಂಗಮ್ಮ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಅಧೀನ ಕಾರ್ಯದರ್ಶಿ ರಶ್ಮಿ ಎಂ.ಎಸ್. ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಮಾನ್ವಿ ತಾಲೂಕಿನ ಬಾಬಾನಾಯಕ ಕಾಲೋನಿ, ಯರಮಲದೊಡ್ಡಿ ಮತ್ತು ಉಮಳಿ ಹೊಸೂರು-2ರ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಇಲಾಖೆಯು ರಚಿಸಿದ ತನಿಖಾ ತಂಡ ನಡೆಸಿದ ತನಿಖೆಯಲ್ಲಿ ಭ್ರಷ್ಟಾಚಾರದ ಅಂಶಗಳು ಮೇಲ್ನೋಟಕ್ಕೆ ಸಾಬೀತಾಗಿವೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಇಲಾಖೆಯ ಉಪನಿರ್ದೇಶಕರ ವರದಿಯನ್ನಾಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.
ಅಮಾನತ್ತಿನಲ್ಲಿರುವ ಅಧಿಕಾರಿ ಶಿವಗಂಗಮ್ಮ ಅವರು ಇಲಾಖೆಯ ಅನುಮತಿಯಿಲ್ಲದೆ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆಯನ್ನು ಮುಂದುವರಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿನ ಲೋಪಗಳ ಬಗ್ಗೆ ತೀವ್ರ ತನಿಖೆ ನಡೆಯುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.