ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.
ಗಂಗಾವತಿ:”ಮನುಷ್ಯನ ದೇಹದ ಅತ್ಯಂತ ಸೂಕ್ಷ್ಮವಾದ ಮತ್ತು ಅವಿಭಾಜ್ಯ ಅಂಗ ಕಣ್ಣು. ಇದು ಬಹಳ ಸೂಕ್ಷ್ಮತೆಯಿಂದ ಕೂಡಿದ್ದು, ಇದರ ರಕ್ಷಣೆ ಅತ್ಯಾವಶ್ಯಕ” ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಅಭಿಪ್ರಾಯಪಟ್ಟಿದ್ದಾರೆ. ನಗರದ ವಿವೇಕ ಭಾರತಿ ಶಾಲೆಯಲ್ಲಿ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಹಾಗೂ ಡಾ. ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆ (ಬಳ್ಳಾರಿ) ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಂಡು, ಉಚಿತ ತಪಾಸಣೆಯೊಂದಿಗೆ ಅಗತ್ಯ ಸಲಹೆ ಮತ್ತು ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಅವರು ಈ ಸಂದರ್ಭದಲ್ಲಿ ಸಲಹೆ ನೀಡಿದರು.
ಇದೇ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಕಾರ್ಯದಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮತದಾರರ ಪಟ್ಟಿಯಿಂದ ಯಾರೂ ಹೊರಗುಳಿಯದಂತೆ ಎಚ್ಚರ ವಹಿಸಬೇಕು. ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಪವಿತ್ರ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ದೇಶದ ಅಭಿವೃದ್ಧಿ ಹಾಗೂ ರಕ್ಷಣೆಗೆ ಮುಂದಾಗಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಮ್ಯಾಗಳಮನಿ, “ಕಣ್ಣಿನಿಂದಲೇ ನಾವು ಈ ಸುಂದರ ಜಗತ್ತನ್ನು ನೋಡುತ್ತಿದ್ದೇವೆ. ಸೃಷ್ಟಿಯ ಸೊಬಗು, ಸುಖ-ದುಃಖಗಳು ಹಾಗೂ ಭಾವನೆಗಳ ಮೂಲಕ ಜಗತ್ತಿನ ವಿಸ್ಮಯವನ್ನು ಕಣ್ಣಿನಿಂದಲೇ ಅನುಭವಿಸಬಹುದು. ಆದ್ದರಿಂದ ಕಣ್ಣಿನ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅತಿ ಮುಖ್ಯ” ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ನಟೇಶ್, ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಿ. ಅಶೋಕ್, ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಮೈಲಾರಪ್ಪ ಬೂದಿಹಾಳ ಹಾಗೂ ನಗರಸಭೆ ಮಾಜಿ ಸದಸ್ಯ ನವೀನ್ ಮಾಲಿಪಾಟೀಲ್ ಉಪಸ್ಥಿತರಿದ್ದು ಮಾತನಾಡಿದರು. ಡಾ. ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆಯ ಮಾರ್ಕೆಟಿಂಗ್ ಮ್ಯಾನೇಜರ್ ಕೆ. ಮಣಿರತ್ನಂ ಆಸ್ಪತ್ರೆಯ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಕೆ.ಎಂ. ಅರವಿಂದ್ ಯೋಗಿ ನಿರೂಪಿಸಿದ್ದು, ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
