ಮರ್ಚೆಡ್ ಡೇಸ್ ಫಾಲೋ ಅಪ್ ಸುದ್ದಿ|ರಾಯಚೂರು.
ರಾಯಚೂರು : ಜಿಲ್ಲೆಯ ಸಿಂಧನೂರು ತಾಲೂಕಿನ ಒಳಬಳ್ಳಾರಿ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಇತ್ತೀಚೆಗೆ ಶಾಲಾ ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಘಟನೆಗೆ ಸಂಬಂಧಿಸಿದಂತೆ, ಮಾಧ್ಯಮಗಳಲ್ಲಿ ಬಂದ ವರದಿಗಳಿಗೆ ತೀವ್ರ ಸ್ಪಂದನೆ ದೊರೆತಿದೆ. ಈ ಗಂಭೀರ ಪ್ರಕರಣವನ್ನು ಗಣನೆಗೆ ತೆಗೆದುಕೊಂಡು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಸತ್ಯ ನಾರಾಯಣ ಶೆಟ್ಟಿ ಅವರು ನೇರವಾಗಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಭೇಟಿಯ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಆರೋಗ್ಯ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತ, ಶಿಕ್ಷಣ ಮತ್ತು ಪೊಲೀಸ್ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ಸಾಥ್ ನೀಡಿದರು. ಅಧಿಕಾರಿಗಳ ತಂಡವು ಶಾಲೆಯ ಒಟ್ಟು ಪರಿಸರ ಹಾಗೂ ಮೂಲಭೂತ ಸೌಕರ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸಿತು.
ವಸತಿ ಶಾಲೆಯ ಅಡುಗೆ ಕೋಣೆಗೆ ಭೇಟಿ ನೀಡಿದ ಆಯೋಗದ ಸದಸ್ಯರು, ಅಲ್ಲಿ ಸಂಗ್ರಹಿಸಲಾಗಿದ್ದ ಆಹಾರ ಧ್ಯಾನ್ಯಗಳ ಗುಣಮಟ್ಟ ಹಾಗೂ ಅವುಗಳ ನಿರ್ವಹಣಾ ವಿಧಾನಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. ಅಲ್ಲದೆ, ಪ್ರಾಂಶುಪಾಲರನ್ನು ತೀವ್ರವಾಗಿ ವಿಚಾರಣೆ ನಡೆಸಿ, ಮಕ್ಕಳು ಅಸ್ವಸ್ಥಗೊಳ್ಳಲು ನಿಖರವಾಗಿ ಕಾರಣವೇನು ಎಂಬ ಬಗ್ಗೆಯೂ ಆಳವಾದ ಚರ್ಚೆ ನಡೆಸಲಾಯಿತು.
ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿದ ಸತ್ಯ ನಾರಾಯಣ ಶೆಟ್ಟಿ ಅವರು, ಈ ಘಟನೆಗೆ ನೇರ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜೊತೆಗೆ, ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಖಚಿತಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
