Home ಸುದ್ದಿ ಸತತ ಪ್ರಯತ್ನ ಮತ್ತು ನಿರಂತರ ಅಧ್ಯಯನವೇ ಯಶಸ್ಸಿನ ಮೂಲಮಂತ್ರ: ಡಾ. ಶಿವರಾಜ ಗುರಿಕಾರ.
ಸುದ್ದಿ

ಸತತ ಪ್ರಯತ್ನ ಮತ್ತು ನಿರಂತರ ಅಧ್ಯಯನವೇ ಯಶಸ್ಸಿನ ಮೂಲಮಂತ್ರ: ಡಾ. ಶಿವರಾಜ ಗುರಿಕಾರ.

Share
Share
ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.
ಶ್ರೀ ಕೊಲ್ಲಿ ನಾಗೇಶ್ವರ ರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂ.ಕಾಂ ವಿಭಾಗದ ಫ್ರೆಶರ್ಸ್ ಡೇ ಸಂಭ್ರಮ.

ಗಂಗಾವತಿ :ಜೀವನದಲ್ಲಿ ಅಂದುಕೊಂಡ ಗುರಿ ತಲುಪಲು ನಿರಂತರ ಪರಿಶ್ರಮ ಮತ್ತು ವ್ಯವಸ್ಥಿತ ಅಧ್ಯಯನವೇ ಮೂಲಾಧಾರ ಎಂದು ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರ ರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಶಿವರಾಜ ಗುರಿಕಾರ ಅಭಿಪ್ರಾಯಪಟ್ಟರು. ಕಾಲೇಜಿನ ಎಂ.ಕಾಂ (ಸ್ನಾತಕೋತ್ತರ ವಾಣಿಜ್ಯಶಾಸ್ತ್ರ) ವಿಭಾಗದ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ನೂತನ ಪ್ರವೇಶಾತಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ (ಫ್ರೆಶರ್ಸ್ ಪಾರ್ಟಿ) ಉದ್ಘಾಟಿಸಿ,  ಅವರು  ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ ಪಡೆದ ಹಳೆಯ ವಿದ್ಯಾರ್ಥಿಗಳು ಇಂದು ಪ್ರತಿಷ್ಠಿತ ಹುದ್ದೆಗಳಲ್ಲಿದ್ದಾರೆ. ಪ್ರಸ್ತುತ ಕಲಿಯುತ್ತಿರುವ ವಿದ್ಯಾರ್ಥಿಗಳು ಕಾಲೇಜಿನ ಗ್ರಂಥಾಲಯ ಸೇರಿದಂತೆ ಲಭ್ಯವಿರುವ ಎಲ್ಲ ಶೈಕ್ಷಣಿಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾಲೇಜಿನ ಐಕ್ಯೂಎಸಿ ಸಂಚಾಲಕ ಡಾ. ಉಮಾಕಾಂತ ಅವರೆಡ್ಡಿ ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಜ್ಞಾನ ಮತ್ತು ಸಂಪನ್ಮೂಲಗಳು ಸುಲಭವಾಗಿ ಲಭ್ಯವಿವೆ. ಯುವಜನರು ಕೇವಲ ಉದ್ಯೋಗಾಕಾಂಕ್ಷಿಗಳಾಗದೆ, ದೊಡ್ಡ ಕನಸುಗಳನ್ನು ಹೊತ್ತು ಸ್ವಂತ ಉದ್ಯಮಗಳನ್ನು ಕಟ್ಟುವ ಸಾಹಸಕ್ಕೆ ಮುಂದಾಗಬೇಕು ಎಂದರು. ವಿದ್ಯಾರ್ಥಿಗಳು ತಮ್ಮ ಜೀವನದ ಪ್ರಗತಿಗೆ ಪೂರಕವಾದ ನಿಖರ ವಿಷಯಗಳನ್ನು ಆಯ್ಕೆ ಮಾಡಿಕೊಂಡು ಆಳವಾಗಿ ಅಧ್ಯಯನ ಮಾಡಿದಾಗ ಮಾತ್ರ ಉನ್ನತ ಸಾಧನೆ ಸಾಧ್ಯ ಎಂದು ವಿವರಿಸಿದರು.

ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಹಾಗೂ ಸ್ನಾತಕೋತ್ತರ ವಿಭಾಗದ ಸಂಚಾಲಕಿ ಮೆಹತಾಬ್ ಅಂಜುಮ್ ಮಾತನಾಡಿ, ಇಂದಿನ ಶೈಕ್ಷಣಿಕ ಹಾಗೂ ವೃತ್ತಿ ಬದುಕಿನಲ್ಲಿ ಎದುರಾಗುವ ಸಮಸ್ಯೆ, ಸವಾಲುಗಳನ್ನು ಸಕಾರಾತ್ಮಕವಾಗಿ ಎದುರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಸ್ನಾತಕೋತ್ತರ ಹಂತಕ್ಕೆ ಕಾಲಿಟ್ಟಿರುವ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದ ಅವರು, ಕ್ಯಾಂಪಸ್‌ನಲ್ಲಿ ಸಮಯ ವ್ಯರ್ಥ ಮಾಡದೆ ಕಾಲೇಜಿನ ಸಂಪನ್ಮೂಲಗಳನ್ನು ಬಳಸಿಕೊಂಡು ಆರ್ಥಿಕ ಹಾಗೂ ಬೌದ್ಧಿಕವಾಗಿ ಸ್ವಾವಲಂಬಿಗಳಾಗುವಂತೆ ಕರೆ ನೀಡಿದರು.

ಉಪನ್ಯಾಸಕ ಶಿವಕುಮಾರ ಉಪಾಸಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಸ್ಪಷ್ಟ ಗುರಿ ಮತ್ತು ದೃಷ್ಟಿಕೋನ ಹೊಂದಿರಬೇಕು. ಸಂವಹನ ಕಲೆ ಹಾಗೂ ನವೀನ ವೃತ್ತಿಪರ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ಓದುಗರು ಮತ್ತು ಚಿಂತಕರಿಗೆ ಸಮಾಜದಲ್ಲಿ ಸೂಕ್ತ ಗೌರವ ನೀಡುವ ಸಂಸ್ಕಾರ ರೂಢಿಸಿಕೊಳ್ಳಬೇಕು ಎಂದರು. ಮತ್ತೊಬ್ಬ ಉಪನ್ಯಾಸಕ ಸಂದೀಪ್ ಮಾತನಾಡಿ, ನೈಜ ಜಗತ್ತು ಮತ್ತು ಸಮಾಜವೇ ನಮಗೆ ಅತ್ಯುತ್ತಮ ಪಾಠಶಾಲೆ. ನಮ್ಮ ಸಾಮರ್ಥ್ಯ ಹಾಗೂ ದೌರ್ಬಲ್ಯಗಳನ್ನು ಸರಿಯಾಗಿ ವಿಶ್ಲೇಷಿಸಿಕೊಂಡು, ಸಿಗುವ ಪ್ರತಿ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮುನ್ನಡೆಯಬೇಕು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿನಿಯರಾದ ಉಮಾ ಮತ್ತು ಜ್ಞಾನೇಶ್ವರಿ ಕಾಲೇಜಿನ ಶೈಕ್ಷಣಿಕ ವಾತಾವರಣ ಮತ್ತು ತಮ್ಮ ಅನುಭವಗಳನ್ನು ಹಂಚಿಕೊಂಡರು. ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಅಭಿಷೇಕ್, ರಾಹುಲ್, ಮಂಜುನಾಥ, ಶಾಂತಗೌಡ, ಸವಿತಾ, ಶಂಭುಲಿಂಗಪ್ಪ ಹಾಗೂ ವಿದ್ಯಾರ್ಥಿ ಸಮೂಹ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅಂಬಿಕಾ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಸಮಾರಂಭದಲ್ಲಿ ಬಿಂದು ಸ್ವಾಗತಿಸಿದರು. ಸಫೀನಾ ಮತ್ತು ಪ್ರೇಮಾ.ಯು ಕಾರ್ಯಕ್ರಮ ನಿರೂಪಿಸಿ, ಶ್ರೀದೇವಿ ವಂದಿಸಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...